ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ : ಜಿಲ್ಲೆಯ ಯುವಜನರು ಉದ್ಯೋಗಾಕಾಂಕ್ಷಿಗಳು ಪ್ರಯೋಜನ ಪಡೆಯಲು ಪೂರ್ವ ಸಿದ್ದತೆ ಕೈಗೊಳ್ಳಿ-ಜಿಲ್ಲಾಧಿಕಾರಿ ಶಿಲ್ಪಾನಾಗ್.

ಚಾಮರಾಜನಗರ:ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ : ಜಿಲ್ಲೆಯ ಯುವಜನರು ಉದ್ಯೋಗಾಕಾಂಕ್ಷಿಗಳು ಪ್ರಯೋಜನ ಪಡೆಯಲು ಪೂರ್ವ ಸಿದ್ದತೆ ಕೈಗೊಳ್ಳಿ-ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಚಾಮರಾಜನಗರ
ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಇದೇ ಫೆಬ್ರವರಿ 26 ಹಾಗೂ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಚಾಮರಾಜನಗರ ಜಿಲ್ಲೆಯ ಯುವಜನರು, ಉದ್ಯೋಗಾಂಕಾಂಕ್ಷಿಗಳು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಅನುಕೂಲವಾಗುವಂತೆ ಪೂರ್ವ ಸಿದ್ದತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಸಂಬಂಧ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಆಯೋಜನೆಯಾಗಿರುವ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ರಾಜ್ಯದ ಎಲ್ಲಾ ವಲಯಗಳಿಂದ 500ಕ್ಕೂ ಹೆಚ್ಚು ಪ್ರತಿಷ್ಠಿತ, ಬಹುರಾಷ್ಟ್ರೀಯ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಇತರೆ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೊಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.

ಉದ್ಯೋಗಾಕಾಂಕ್ಷಿಗಳು ಸ್ಕಿಲ್ ಕನೆಕ್ಟ್ ಪೋರ್ಟಲ್ ಮುಖಾಂತರ ನೋಂದಣಿಯಾಗಬೇಕಿದೆ. ಇದಕ್ಕಾಗಿ ಜಿಲ್ಲೆಯ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ನೋಂದಾಯಿಸಿ ನೆರವಾಗಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಿಬಿರಗಳನ್ನು ತೆರೆಯಬೇಕು. ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದಲ್ಲಿಯೇ ಪ್ರತ್ಯೇಕ ಕೌಂಟರ್ ತೆರೆದು ಅಲ್ಲಿಯೂ ನೋಂದಣಿಗೆ ವ್ಯವಸ್ಥೆ ಮಾಡಬೇಕು. ತಾಲೂಕು ಕಚೇರಿಗಳಲ್ಲಿಯೂ ಹೆಲ್ಪ್ ಡೆಸ್ಕ್ ತೆರೆದು ಉದ್ಯೋಗಾಕಾಂಕ್ಷಿಗಳ ನೋಂದಣಿ ಮಾಡಿ ಸಲಹೆ ಮಾರ್ಗದರ್ಶನ ಮಾಡಬೇಕು ಎಂದರು.

ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆಯಬೇಕಿದೆ. ಹೀಗಾಗಿ ಜಿಲ್ಲೆಯ ವಿದ್ಯಾ ಸಂಸ್ಥೆಗಳು, ವಿವಿಧ ಇಲಾಖೆಗಳ ಸಹಕಾರ ಪಡೆದು ಉದ್ಯೋಗಾಕಾಂಕ್ಷಿಗಳು ಭಾಗವಹಿಸಲು ಪೂರ್ವಭಾವಿ ಸಿದ್ದತೆಗಳನ್ನು ಕೈಗೊಳ್ಳಬೇಕಿದೆ. ನಗರ ಸ್ಥಳೀಯ ಸಂಸ್ಥೆ, ಸ್ವ ಸಹಾಯ ಸಂಘಗಳ ನೆರವು ಪಡೆದು ವ್ಯಾಪಕ ಪ್ರಚಾರ ಮಾಡಬೇಕು ಎಂದು ಹೇಳಿದರು.

ಉದ್ಯೋಗ ಮೇಳಕ್ಕೆ ಜಿಲ್ಲೆಯಲ್ಲಿರುವ ಉದ್ಯೋಗದಾತರು ಭಾಗವಹಿಸಬೇಕು. ಉದ್ಯೋಗ ನೀಡುವ ಕಂಪನಿಗಳು ನೋಂದಣಿಯಾಗಬೇಕಿದೆ. ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ವಿವಿಧ ಇಲಾಖೆಗಳು, ಉದ್ಯೋಗ ನೀಡುವ ಸಂಸ್ಥೆಗಳ ಪಾತ್ರವು ಸಹ ಮುಖ್ಯವಾಗಿದೆ. ಹೀಗಾಗಿ ಎಲ್ಲರು ಸೇರಿ ಜಿಲ್ಲೆಯ ಯುವಜನರು ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯುವ ಅವಕಾಶ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮಿ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಎ. ಮಹಮ್ಮದ್ ಅಕ್ಬರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಸವಿತ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್ ಪ್ರಸನ್ನ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಎಂ.ವಿ. ಸುಧಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುರೇಶ್, ಜಿಲ್ಲೆಯ ವಿವಿಧ ಕೈಗಾರಿಕಾ ಸಂಸ್ಥೆಗಳ ಉದ್ಯಮಿಗಳು, ಅವರ ಪ್ರತಿನಿಧಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ