ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಜಾರಿಗೊಳಿಸಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಚಾಮರಾಜನಗರ:ರಾಜ್ಯ ಸರ್ಕಾರವು ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಜಾರಿಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾ ಆಡಳಿತ ಭವನದಲ್ಲಿ ಪ್ರತಿಭಟನೆ ನಡೆಸಲಾಯಿತು.

ಚಾಮರಾಜನಗರ.ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೆಲ ಕಾಲ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಈ ವೇಳೆ ದಸಂಸ ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ ರವರು ಮಾತನಾಡಿ ರಾಜ್ಯದ ಜನಸಂಖ್ಯೆಯ ಬಹುಭಾಗ ವಾಗಿರುವ ಆದಿವಾಸಿಗಳು, ಅಲೆಮಾರಿಗಳು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾ ತರು ಸೇರಿದಂತೆ ಇತರೆ ಶೋಷಿತ ಸಮುದಾಯಗಳು ಹಲವು ದಶಕಗಳಿಂದಲೂ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಾ ಬಂದಿವೆ. ಜಾತಿ ಗಣತಿ ವರದಿ ಸ್ವೀಕಾರಗೊಂಡ ಕೂಡಲೇ ಕೆಲವು ಪಟಭದ್ರ ಜಾತಿವಾದಿ ವ್ಯಕ್ತಿಗಳು ಹಾಗೂ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ತೀವ್ರ ಅಸಮಧಾನ ಹೊರ ಹಾಕಿ ವಿರೋಧ ವ್ಯಕ್ತಪಡಿಸುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ಪಟಭದ್ರ ಜಾತಿವಾದಿಗಳು ಜಾತಿ ಜನಗಣತಿ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ ಎಂದರು.

ಜಾತಿ ಗಣತಿ ವರದಿಯ ಅಂಕಿ ಅಂಶಗಳ ಪ್ರಕಾರ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಈಗಿರುವ ಶೇ.50 ರಷ್ಟು ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ರಾಜ್ಯದ ಸಾಮಾಜಿಕ ನ್ಯಾಯದ ಪರಂಪರೆಯನ್ನು ಸರ್ಕಾರ ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ದಸಂಸ ಪದಾಧಿಕಾರಿಗಳಾದ ನಂಜುಂಡಸ್ವಾಮಿ, ಗೂಳಿಪುರ ಅನಿಲ್ ಕುಮಾರ್, ಕೌದಳ್ಳಿ ಜಾನಿ, ಶಿವಕುಮಾರ್, ರಂಗಸ್ವಾಮಿ, ಚಂದ್ರಶೇಖರ್, ಶಾಂತರಾಜು, ಧರಣೇಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ