ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಸಾಹಸ ನಮ್ಮೆಲ್ಲರಿಗೆ ಸ್ಪೂರ್ತಿಯಾಗಿದೆ — ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ:ಬ್ರಿಟೀಷರ ವಿರುದ್ಧ ದೇಶದ ರಕ್ಷಣೆಗಾಗಿ ಕೆಚ್ಚೆದೆಯಿಂದ ಹೋರಾಡಿದ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಸಾಹಸ, ಆದರ್ಶಗಳು ನಮ್ಮೆಲ್ಲರಿಗೂ ಸ್ಪೂರ್ತಿಯಾಗಿವೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

ಚಾಮರಾಜನಗರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಕರ್ನಾಟಕಕ್ಕೆ, ಕನ್ನಡಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಕೊಡುಗೆ ಅಪಾರವಾಗಿದೆ. ದೇಶಪ್ರೇಮಿಯಾಗಿದ್ದ ರಾಣಿ ಚೆನ್ನಮ್ಮನವರು ನಾಡು, ನುಡಿಯ ಬಗ್ಗೆ ಗೌರವ ಹೊಂದಿದ್ದರು. ದೇಶದ ಜನರ ರಕ್ಷಣೆಗಾಗಿ ತನ್ನ ಪ್ರಾಣದ ಹಂಗನ್ನು ತೊರೆದು ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ ಚೆನ್ನಮ್ಮ ಅವರ ಧೈರ್ಯ, ಶೌರ್ಯ, ಸಾಹಸಗಾಥೆ ಎಲ್ಲಾ ಮಹಿಳೆಯರಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಕಿತ್ತೂರು ರಾಣಿ ಚೆನ್ನಮ್ಮ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸುವ ಮೂಲಕ ಸರ್ಕಾರಿ ನೌಕರರು ಜನಸಾಮಾನ್ಯರಿಗೆ ಸೌಲಭ್ಯಗಳನ್ನು ದೊರಕಿಸುವ ನಿಟ್ಟಿನಲ್ಲಿ ಉತ್ತಮ ಆಡಳಿತದ ವಾತಾವರಣ ಕಲ್ಪಿಸಬೇಕು. ನಿಗದಿತ ಗುರಿ ಸಾಧನೆಗೆ ಎಲ್ಲರೂ ಕಾರ್ಯೋನ್ಮುಖರಾಗಬೇಕು. ಅದೇ ರಾಣಿ ಚೆನ್ನಮ್ಮ ಅವರಿಗೆ ನಾವುಗಳು ಸಲ್ಲಿಸುವ ಗೌರವವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ತಹಶೀಲ್ದಾರ್ ಗಿರಿಜ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಾಜು, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ