ಕನ್ನಡ ಸಾಹಿತ್ಯ ಪರಿಷತ್ತಿಗೆ ನಾಲ್ವಡಿ ಕೃಷ್ಣ ರಾಜ ಒಡೆಯರ ಕೊಡುಗೆ ಅಪಾರ–ಡಿ. ಶ್ರೀಕಾಂತ್
ದೊಡ್ಡಬಳ್ಳಾಪುರ : ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದ ಮಹನೀಯರ ಆಶಯ ಸಾಕಾರಗೊಂಡಾಗ ಮಾತ್ರ ಕನ್ನಡ ಭಾಷೆ, ಸಾಹಿತ್ಯ,ಮತ್ತು ಸಂಸ್ಕೃತಿ ಸಂವರ್ಧನೆಗೊಳ್ಳುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕನ್ನಡ ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹತ್ವ ಸ್ಥಾನವಿದೆ. ಮೊದಲಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ನಂತರ ಕನ್ನಡ ಸಾಹಿತ್ಯ ಪರಿಷತ್ತು ಎಂಬ ಹೆಸರು ಪಡೆದ ಈ ಸಂಸ್ಥೆಗೆ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ ಅಪಾರವಾಗಿದೆ ಎಂದರು.
ಕನ್ನಡ ನಾಡು,ನುಡಿ ಮತ್ತು ಕನ್ನಡಿಗರ ಬದುಕಿನ ವಿಚಾರಗಳ ಬಗ್ಗೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ನಿರ್ವಹಿಸಬೇಕಾಗಿದೆ. ನಮ್ಮ ರಾಜ್ಯದಲ್ಲಿ ನೆಲೆಸುವ ಅನ್ಯ ಭಾಷಿಕರಿಗೆ ಕನ್ನಡ ಕಲಿಸುವ ಯೋಜನೆ ರೂಪಿಸಬೇಕಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಕನ್ನಡ ರತ್ನ, ಕಾವ್ಯ, ಜಾಣ ಪರೀಕ್ಷೆಯ ಬಗ್ಗೆ ಪ್ರಚಾರ ಮಾಡುವುದು ಮತ್ತು ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆ ಮಾಡಬೇಕಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ,
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಮಹತ್ವದ ಕವಿಗಳ ಕೃತಿಗಳ ಹಕ್ಕು ಸ್ವಾಮ್ಯ ಹೊಂದಿದೆ. ಕನ್ನಡ ನಿಘಂಟು ರಚನೆ ಮತ್ತು ಪರಿಷ್ಕರಣೆಯಲ್ಲಿ ಮಹತ್ವದ ಸಾಧನೆ ಮಾಡಿದೆ. ಉತ್ತಮ ಗ್ರಂಥಾಲಯ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯ ಬೆಳವಣಿಗೆಗೆ, ಅಧ್ಯಯನ ಮತ್ತು ಸಂಶೋಧನೆಗೆ ಸಹಕಾರಿಯಾಗಿದೆ. ಇದರ ಸದುಪಯೋಗ ಕನ್ನಡಿಗರಿಗೆ ತಲುಪಬೇಕಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ
ಪುಸ್ತಕ ಪ್ರಕಟಣೆಯಲ್ಲಿ ಬದಲಾವಣೆ ಆಗಬೇಕಾಗಿದೆ. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಆಶೋತ್ತರಗಳನ್ನು ಈಡೇರಿಸಿದಾಗ ಮಾತ್ರ ಅದು ಜನಸಾಮಾನ್ಯರ ಪರಿಷತ್ತು ಆಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಇಸ್ತೂರು ಕೋದಂಡರಾಮ ಭಜನಾ ಮಂಡಲಿ ಕಾರ್ಯದರ್ಶಿ ರಂಗಸ್ವಾಮಯ್ಯ, ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ, ಕನ್ನಡಪರ ಸಂಘಟನೆಯ ದೊಡ್ಡಹೆಜ್ಜಾಜಿ ಮೂರ್ತಿ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಕಸಾಪ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ನಾಗರತ್ನಮ್ಮ, ಷಫೀರ್, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಎಂ.ಸಿ.ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು