ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ 500 ಕೋಟಿ ಉಚಿತ ಟಿಕೆಟ್ ವಿತರಣೆ ಹಿನ್ನೆಲೆ : ಸಂಭ್ರಮೋತ್ಸವ ಆಚರಣೆ

ಚಾಮರಾಜನಗರ: ಜುಲೈ 14 ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆಯಡಿ ಮಹಿಳೆಯರು ಪ್ರಯಾಣಿಸಲು ಉಚಿತವಾಗಿ ರಾಜ್ಯಾದ್ಯಂತ 500 ಕೋಟಿ ಟಿಕೆಟ್ ವಿತರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸಂಭ್ರಮೋತ್ಸವ ಆಚರಿಸಲಾಯಿತು.

ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದ ಸಂಭ್ರಮೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.

ಬಣ್ಣದ ಹೂ ಗಳಿಂದ ಶೃಂಗಾರಗೊಂಡಿದ್ದ ಎರಡು ಕೆ.ಎಸ್.ಆರ್.ಟಿ.ಸಿ ಬಸ್ಸುಗಳಿಗೆ ಪೂಜೆ ಸಲ್ಲಿಸಲಾಯಿತು. ಗಣ್ಯರು ಹಸಿರು ನಿಶಾನೆ ತೋರುವ ಮೂಲಕ ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದರು. 500 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿನ ಪ್ರಯಾಣಿಕರಿಗೆ ಸಿಹಿ ಹಂಚಲಾಯಿತು.

ಇದೇ ವೇಳೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಇಬ್ಬರು ಚಾಲಕರು ಹಾಗೂ ನಿರ್ವಾಹಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಣ್ಯರು 500 ಕೋಟಿ ಉಚಿತ ಟಿಕೆಟ್ ವಿತರಣೆಯ ಅಂಗವಾಗಿ ಹೊರತಂದಿರುವ ಪೋಸ್ಟರ್‍ಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚುನಾವಣಾ ಪೂರ್ವದಲ್ಲಿ ನೀಡಿದ ವಾಗ್ದಾನದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದಿದ್ದೇವೆ. ಈ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅನುಕೂಲ ಮಾಡಿಕೊಟ್ಟಿದ್ದೇವೆ. ಈ ಯೋಜನೆ ಇನ್ನಷ್ಟು ಸದುಪಯೋಗವಾಗಲಿ ಎಂದರು.

ಶಕ್ತಿ ಯೋಜನೆಯಡಿ ಮಹಿಳೆಯರು ಪ್ರಯಾಣಿಸಲು 500 ಕೋಟಿ ಉಚಿತ ಟಿಕೆಟ್ ಗಳು ವಿತರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಭ್ರಮ ಆಚರಿಸಲಾಗುತ್ತಿದೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು ಸರ್ಕಾರದ ಗ್ಯಾರಂಟಿ ಯಶಸ್ವಿ ಅನುಷ್ಟಾನದ ಸಂತಸದಲ್ಲಿದ್ದೇವೆ. ಮಹಿಳೆಯರು ದೇವಾಲಯಗಳಿಗೆ ಬಸ್ಸುಗಳ ಮೂಲಕ ಉಚಿತವಾಗಿ ಭೇಟಿ ನೀಡುತ್ತಿದ್ದಾರೆ. ಇದರಿಂದ ದೇವಾಲಯಗಳ ಆದಾಯವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ಮಾತನಾಡಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು ಸ್ತ್ರೀ ಸ್ವಾವಲಂಬಿ ಕನಸು ಇಂದು ನನಸಾಗಿದೆ. ಜಿಲ್ಲೆಯಲ್ಲೂ ಶಕ್ತಿ ಯೋಜನೆಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು ಯೋಜನೆ ಸಾರ್ಥಕತೆ ಪಡೆದಿದೆ ಎಂದರು.

ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಚಾಮರಾಜನಗರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಸೋಮೇಶ್ವರ, ಸದಸ್ಯರಾದ ಭಾಗ್ಯ, ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಕುಮಾರ ಮಾದಾಪುರ, ಮರಿಯಾಲದಹುಂಡಿ ಕುಮಾರ್, ರಾಜೇಶ್, ಜಡೆಯಪ್ಪ, ಮಂಜುಳಾ, ಸಿದ್ದಿಕ್ ವುಲ್ಲಾ, ರಮೇಶ್, ಗಣೇಶ್ ಕುಮಾರ್, ಚಿನ್ನಸ್ವಾಮಿ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠರಾಜೇಅರಸ್, ಇನ್ನಿತರ ಅಧಿಕಾರಿಗಳು, ಗಣ್ಯರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.