ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಹೊಗೆ : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ರಾಜೀನಾಮೆ ನೀಡಿದ ಸದಸ್ಯ

ದೊಡ್ಡಬಳ್ಳಾಪುರ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯತ್ವಕ್ಕೆ ಸೊಣ್ಣಪ್ಪನಹಳ್ಳಿ ರಮೇಶ್ ಎಸ್ ಯು ಅವರು ರಾಜೀನಾಮೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ಪ್ರಾಧಿಕಾರ ರಚನೆ ಮಾಡಿದೆ. ಪ್ರತಿ ತಾಲೂಕುಗಳಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾಗಿದ್ದು, ಪ್ರಾಧಿಕಾರಕ್ಕೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಸರ್ಕಾರ ನೇಮಕ ಮಾಡಿದೆ.

ಸರ್ಕಾರ ಪ್ರಾಧಿಕಾರದ ಸದಸ್ಯರುಗಳಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ನೀಡಿದೆ.

ಕಳೆದ ಒಂದು ವಾರದ ಹಿಂದೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ನೇಮಕವಾಗಿದ್ದ ಕಾಂಗ್ರೆಸ್ ಮುಖಂಡ ಸೊಣ್ಣಪ್ಪನಹಳ್ಳಿಯ ಎಸ್.ಯು.ರಮೇಶ್ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕಳೆದ 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ಮುಖಂಡರು ಮಾಜಿ ಶಾಸಕರು ಸ್ವಜನ ಪಕ್ಷಪಾತಿಗಳಾಗಿದ್ದು ಕುಟುಂಬ ರಾಜಕಾರಣ ಮಾಡುತ್ತಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿ, ಆಭ್ಯರ್ಥಿಯನ್ನು ಬದಲಾಯಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ತಮ್ಮ ಬೇಡಿಕೆ ಈಡೇರದ ಕಾರಣಕ್ಕೆ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ನಂತರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕರಾಗಿದ್ದ ಟಿ.ವೆಂಕಟರಮಣಯ್ಯ ಅವರು 30 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಕಳೆದ ಒಂದು ವಾರದ ಹಿಂದೆ ದಲಿತ ಸಮುದಾಯದ ಒಂದು ಬಣ ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡು ಸಭೆ ನಡೆಸಿತ್ತು ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಈಗ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯತ್ವಕ್ಕೆ ಸೊಣ್ಣಪ್ಪನಹಳ್ಳಿ ರಮೇಶ್ ಅವರು ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.