ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿಯ ಬೃಹತ್ ಬೈಕ್ ಜಾಥಾ
ಚಾಮರಾಜನಗರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮತದಾನದ ಮಹತ್ವ ಕುರಿತು ನಾಗರಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಚಾಮರಾಜನಗರ ಪಟ್ಟಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಬೃಹತ್ ಬೈಕ್ (ರ್ಯಾಲಿ) ಜಾಥಾ ಎಲ್ಲರ ಗಮನ ಸೆಳೆಯಿತು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಮತದಾನದ ಪ್ರತಿಜ್ಞಾ ವಿಧಿ ಬೊಧಿಸಿದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಇತರೆ ಗಣ್ಯರು ಕೇಸರಿ, ಬಿಳಿ, ಹಸಿರು ಬಣ್ಣಗಳಿಂದ ಕೂಡಿದ ಮತದಾನ ಜಾಗೃತಿಯ ಬಲೂನ್‍ಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಬೈಕ್ ಜಾಥಾವನ್ನು ಉದ್ಘಾಟಿಸಿದರು.
ಇದೇ ವೇಳೆ ಬೈಕ್ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಪ್ರತಿಯೊಬ್ಬರಲ್ಲೂ ಮತದಾನದ ಜಾಗೃತಿ ಮೂಡಿಸಲು ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ಚುನಾವಣೆಯು ಐದು ವರ್ಷಕ್ಕೊಮ್ಮೆ ಬರುವ ಹಬ್ಬವಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿರುವ ಎಲ್ಲ ಅರ್ಹ ಮತದಾರರು ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ಲೋಕಸಭಾ ಚುನಾವಣೆಯ ಮತದಾನವು ಏಪ್ರಿಲ್ 26ರಂದು ನಡೆಯಲಿದ್ದು, ಈ ಬಾರಿ ಮೊದಲ ಸಲ ಮತದಾನ ಮಾಡುವ 18 ವರ್ಷ ತುಂಬಿದ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕು. ಮತದಾನದ ಪಾಮುಖ್ಯತೆ ಹಾಗೂ ಯಾವುದೇ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡುವಂತೆ ಇತರರಿಗೂ ತಿಳಿಹೇಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ತಿಳಿಸಿದರು.
ಬಳಿಕ ನೂರಾರು ಬೈಕ್‍ಗಳಲ್ಲಿ ಸಮಾವೇಶಗೊಂಡಿದ್ದ ಜಾಥಾಗೆ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ. ಲಕ್ಷ್ಮೀ ಅವರು ಹಸಿರು ನಿಶಾನೆ ತೋರಿ ಜಾಥಾಗೆ ಶುಭ ಕೋರಿದರು.
ವರದಿ ಆರ್ ಉಮೇಶ್ ಮಲಾರಪಾಳ್ಯ