ಮಲೆ ಮಹದೇಶ್ವರ ಕಾಡಂಚಿನ ಗ್ರಾಮಗಳ ಮೂಲ ಸೌಲಭ್ಯಕ್ಕೆ ಕ್ರಮ : ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಕಾಡಂಚಿನ ತಪ್ಪಲು ಗ್ರಾಮಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಈಗಾಗಲೇ ಪ್ರಸ್ತಾವನೆ ಸಿದ್ದಪಡಿಸಲಾಗಿದ್ದು, ಸೌಲಭ್ಯಗಳಿಗೆ ಎಲ್ಲ ಅಗತ್ಯ ಕ್ರಮ ವಹಿಸಲಾಗುವುದು ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಕಾಡಂಚಿನ ಇಂಡಿಗನತ್ತ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಳೀಯ ಜನರ ಕುಂದು ಕೊರತೆ ಆಲಿಸಿ ಅವರು ಮಾತನಾಡಿದರು.

ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಪ್ರಸ್ತಾವನೆ ಸಿದ್ದವಾಗಿದೆ. ಡಾಂಬರು ರಸ್ತೆ ಹಾಗೂ ಸಿಸಿ ರಸ್ತೆಗೆ ಪ್ರತ್ಯೇಕವಾಗಿ ಅಂದಾಜು ಪಟ್ಟಿಯನ್ನು ಸಿದ್ದಪಡಿಸಲಾಗಿದೆ. ಅರಣ್ಯ ಪ್ರದೇಶದಿಂದ ಕೇಬಲ್ ಮೂಲಕ ವಿದ್ಯುತ್ ಸೌಲಭ್ಯ ಒದಗಿಸಲು 38 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸಹ ತಯಾರಿಸಲಾಗಿದೆ ಎಂದರು.

ಕಾಡಂಚಿನ ಜನರಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಲು ಬದ್ದವಾಗಿದ್ದೇವೆ. ಇಲ್ಲಿನ ಮಕ್ಕಳ ಶೈಕ್ಷಣಿಕ ಸೌಲಭ್ಯಗಳಿಗೂ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಸ್ಥಳೀಯ ಗ್ರಾಮಗಳಿಗೆ ಮತ್ತು ಶಾಲಾ ಮಕ್ಕಳಿಗೆ ಅನುಕೂಲವಾಗಲು ಇನ್ನೂ 4 ವಾಹನಗಳನ್ನು ಮಲೆ ಮಹದೇಶ್ವರ ಪ್ರಾಧಿಕಾರದ ವತಿಯಿಂದ ಒದಗಿಸಲು ಸೂಚಿಸಲಾಗಿದೆ ಎಂದರು.

ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಅವರು ಮಾತನಾಡಿ ಸ್ಥಳೀಯ ಜನರಿಗೆ ರಸ್ತೆ, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡಲು ನಿಯಮ ಬದ್ದವಾಗಿ ಕಾನೂನು ಚೌಕಟ್ಟಿನೊಳಗೆ ಕ್ರಮಕ್ಕೆ ಮುಂದಾಗಲಿದ್ದೇವೆ. ಉತ್ತಮ ರಸ್ತೆ, ವಾಹನಗಳ ಸಂಚಾರಕ್ಕೂ ಅನುಕೂಲವಾಗಲಿದೆ. ಸ್ಥಳೀಯವಾಗಿ ಆರೋಗ್ಯ ಉಪಕೇಂದ್ರ ಜನರ ಆರೋಗ್ಯ ಸೌಲಭ್ಯಕ್ಕಾಗಿ ಸಂಚಾರಿ ಆರೋಗ್ಯ ಘಟಕ ಸ್ಥಾಪನೆ ಮಾಡಬಹುದಾಗಿದೆ. ಜನರ ಆರೋಗ್ಯ ಮತ್ತು ರಕ್ಷಣೆ ಮುಖ್ಯವಾಗಿದೆ ಎಂದರು.

ಜಿಲ್ಲಾಡಳಿತ, ಮಲೆ ಮಹದೇಶ್ವರ ಅಭಿವೃದ್ದಿ ಪ್ರಾಧಿಕಾರ, ಅರಣ್ಯ ಇಲಾಖೆ ಸೇರಿದಂತೆ ಎಲ್ಲರೊಂದಿಗೆ ಚರ್ಚಿಸಿ ನಾಗರಿಕ ಮೂಲ ಸೌಲಭ್ಯ ಒದಗಿಸುವ ಕೆಲಸವನ್ನು ಹಂತ ಹಂತವಾಗಿ ಮಾಡಲಾಗುವುದು. ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಅವರು ತಿಳಿಸಿದರು.

ಸಭೆ ಆರಂಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಲಾಗಿದೆ. ಜನರ ಕುಂದು ಕೊರತೆಗಳ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಸ್ತಾವನೆ ಸಿದ್ದಪಡಿಸಲಾಗಿದೆ. ಶಾಲಾ ವಿದ್ಯಾರ್ಥಿಗಳ ಮುಂದಿನ ಹಂತದ ವಿದ್ಯಾಭ್ಯಾಸ ಹಾಗೂ ಹಾಸ್ಟೆಲ್ ಇನ್ನಿತರ ಸೌಲಭ್ಯಗಳಿಗೆ ಕ್ರಮ ವಹಿಸಲಾಗುತ್ತಿದೆ ಎಂದರು ಇದೇ ವೇಳೆ ಸ್ಥಳೀಯರು ಮಾತನಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಮಾಜಿ ಶಾಸಕರಾದ ಆರ್. ನರೇಂದ್ರ ಅವರು ಸ್ಥಳೀಯ ಜನರ ಸಮಸ್ಯೆಗಳ ಬಗ್ಗೆ ಗಮನಸೆಳೆದರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಕಾಡಾ ಅಧ್ಯಕ್ಷರಾದ ಮರಿಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ವೃತ್ತ ಮುಖ್ಯ ಅರಣ್ಯ ಸಂರಕ್ಷಾಣಾಧಿಕಾರಿ ಹಿರಾಲಾಲ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋಷ್ ಕುಮಾರ್, ತಹಶೀಲ್ದಾರ್ ಗುರುಪ್ರಸಾದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ