ಜನವರಿ 26ರಂದು ಎರಡು ಪಂಚಾಯ್ತಿ ವ್ಯಾಪ್ತಿಯ ಮನೆಗಳ ಮೇಲೆ ಕಪ್ಪು ಬಾವುಟ ಪ್ರದರ್ಶನ
ದೊಡ್ಡಬಳ್ಳಾಪುರ:ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡ ಸತೀಶ್ ಮಾತನಾಡಿ, ಜ.26 ರಂದು ಎರಡೂ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ಸಮಿತಿಯ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಪಡೆಯಲಾಗಿದೆ. ಸಹಿ ಸಂಗ್ರಹ ಮಾಡುವ ಮೂಲಕ ತಹಶೀಲ್ದಾರ್ ಹಾಗೂ ಪೊಲೀಸರಿಗೆ ಸಲ್ಲಿಸಲಾಗಿದೆ. ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು.
ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಗಳಲ್ಲಿ ಸಭೆ ನಡೆಸಿ ನೀಡಲಾಗಿದ್ದ ಯಾವುದೇ ಭರವಸೆಯು ಇದುವರೆಗೂ ಈಡೇರಿಲ್ಲ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡಬಳ್ಳಾಪುರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಿಯ ಕಚೇರಿಯನ್ನು ನಗರಕ್ಕೆ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉರುಳು ಸೇವೆ ಮಾಡಿದರು ಇದುವರೆಗೂ ಸ್ಥಳಾಂತರ ಆಗಿಲ್ಲ.ಇಂತಹ ಕನಿಷ್ಠ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವಲ್ಲೂ ಸಹ ಜನಪ್ರತಿನಿಧಿಗಳು, ಜಿಲ್ಲಾಡಳಿತ ವಿಫಲವಾಗಿದೆ. ಈ ಎಲ್ಲಾ ಕಾರಣದಿಂದ ಗಣರಾಜ್ಯೋತ್ಸವ ದಿನದಂದು ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲಾಗುವುದು ಎಂದರು.
ನಮ್ಮ ಭಾಗದಲ್ಲಿ ತಿಂಗಳಿಗೆ ಎರಡು ಮೂರು ಸಾವುಗಳು ಆಗುತ್ತಿವೆ. ಈ ಸಾವು ಸಹಜವಾಗಿ ಬರುತ್ತಿಲ್ಲ. ಬದಲಿಗೆ ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಅಕಾಲಿಕ ಮರಣ ಹೊಂದುತ್ತಿದ್ದಾರೆ. ಇದಕ್ಕೆ ಕಾರಣ ಅಶುದ್ಧ ಕುಡಿಯುವ ನೀರಿನಿಂದ, ಕೆರೆಗಳ ಮಾಲಿನ್ಯದಿಂದ ಎಂದರು.
ದೊಡ್ಡಬಳ್ಳಾಪುರ ನಗರಸಭೆ ಯುಜಿಡಿ ನೀರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಯುಜಿಡಿ ನೀರು ಮೂರನೇ ಹಂತದಲ್ಲಿ ಶುದ್ಧೀಕರಣಗೊಂಡು ಕೆರೆಗಳಿಗೆ ಬರುವಂತೆ ಮಾಡಬೇಕು
ಅಂರ್ಜಲ ಹದಗೆಡದೇ ಇರುವ ಭಾಗದಿಂದ ಜನರಿಗೆ ಶುದ್ಧ ಕುಡಿಯುವ ನೀರು, ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕು
.
ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಬೇಕು
ಕೈಗಾರಿಕಾ ಪ್ರದೇಶದಲ್ಲಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ ಸ್ಥಾಪನೆ ಮಾಡಿ, ಕೈಗಾರಿಕೆಗಳ ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಕೊಂಡು ಅವರೇ ಆ ನೀರನ್ನು ಕೆರೆಗಳಿಗೆ ಬಿಡದೇ ಮರು ಬಳಿಕೆ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು
ಈ ಎಲ್ಲಾ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸು ವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಮಿತಿ ಹೋರಾಟಗಾರರು ಎಚ್ಚರಿಸಿದ್ದಾರೆ.