*ಸರ್ಕಾರದ ಯೋಜನೆ, ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರಿಂದ ಚಾಲನೆ*

ಚಾಮರಾಜನಗರ: ಜುಲೈ 10 ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ದಿ ಕಾರ್ಯಕ್ರಮಗಳ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ನಗರದಲ್ಲಿಂದು ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.

ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 10ರಿಂದ 12ರವರೆಗೆ ಮೂರು ದಿನಗಳ ಕಾಲ ಆಯೋಜಿತವಾಗಿರುವ ರಾಜ್ಯಸರ್ಕಾರದ ಜನಪರ ಯೋಜನೆ, ಸಾಧನೆಗಳು, ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಕುರಿತು ಮಾಹಿತಿ ಪ್ರಸ್ತುತಪಡಿಸುವ ವಸ್ತು ಪ್ರದರ್ಶನವನ್ನು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು.

ಇದೇ ವೇಳೆ ಮಾತನಾಡಿದ ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನರಿಗೆ ಮಾತು ಕೊಟ್ಟಂತೆ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ. ಪಂಚಗ್ಯಾರಂಟಿ ಯೋಜನೆಗಳು ಜನರ ಪರವಾಗಿವೆ ಎಂದರು.

ರಾಜ್ಯಸರ್ಕಾರ ಅಧಿಕಾರಕ್ಕೆ ಬಂದು ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಎರಡು ವರ್ಷಗಳ ಅಭಿವೃದ್ದಿ ಕಾರ್ಯಕ್ರಮಗಳ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಹಳ ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಸರ್ಕಾರದ ಯೋಜನೆ, ಸಾಧನೆಗಳು ಪ್ರತಿಯೊಬ್ಬರಿಗೂ ಅರಿವಾಗಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು ಅವರು ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ ಇದುವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರು ಬಸ್‍ಗಳಲ್ಲಿ ಪ್ರಯಾಣಿಸಿದ್ದಾರೆ. ವಿಶೇಷವಾಗಿ ಗೃಹಲಕ್ಷ್ಮೀ ಯೋಜನೆಯಲ್ಲಿ ಇಡೀ ರಾಜ್ಯದಲ್ಲಿಯೇ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಸರ್ಕಾರದ ಎಲ್ಲಾ ಅಭಿವೃದ್ಧಿ ಯೋಜನೆಗಳ ಪ್ರಗತಿ ಬಗ್ಗೆ ಜನಸಾಮಾನ್ಯರಿಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ ಎಂದ ಅವರು ಹೆಚ್ಚಿನ ಜನರು ವಸ್ತುಪ್ರದರ್ಶನವನ್ನು ವೀಕ್ಷಿಸುವಂತೆ ಮನವಿ ಮಾಡಿದರು.

ಶಾಸಕರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರು, ಸದಸ್ಯರು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸರ್ಕಾರದ ಯೋಜನೆ, ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ವಸ್ತುಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಎಂ. ರಾಚಯ್ಯ, ಆರ್. ರಾಜೇಂದ್ರ, ಭಾಗ್ಯ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್‍ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ, ವಾರ್ತಾ ಸಹಾಯಕರಾದ ಸುರೇಶ್‍ಕುಮಾರ್, ಇನ್ನಿತರರು ಈ ಸಂದರ್ಭದಲ್ಲಿ ಇದ್ದರು

ವರದಿ:ಆರ್ ಉಮೇಶ್ ಮೈಲಾರಪಾಳ್ಯ