*ಕುಂದಾಣ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟಿಸಿದ ಸಚಿವ ಕೆ.ಹೆಚ್ ಮುನಿಯಪ್ಪ*
ಬೆಂ.ಗ್ರಾ.ಜಿಲ್ಲೆ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ, ಕುಂದಾಣ ಗ್ರಾಮ ಪಂಚಾಯಿತಿ ಕಾರ್ಯಾಲಯ ಇವರ ವತಿಯಿಂದ 1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕುಂದಾಣ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ವನ್ನು
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿದರು.
ಕುಂದಾಣ ಹಾಗೂ ವೆಂಕಟಾಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ದೇವಗಾನಹಳ್ಳಿ ಗ್ರಾಮದಲ್ಲಿ 35 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶಾಲಾ ಕೊಠಡಿ ಉದ್ಘಾಟನೆ ಮಾಡಲಾಯಿತು.
ನಂತರ ಮಾತನಾಡಿದ ಸಚಿವರು ಪಂಚಾಯಿತಿ ಅಭಿವೃದ್ದಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಶ್ರಮಿಸಬೇಕು. ತೆರಿಗೆ ಸಂಗ್ರಹ, ಆದಾಯದಲ್ಲಿ ಕುಂದಾಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಆಗಲಿ. ಪಂಚಾಯಿತಿ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ಕಲ್ಪಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬಯಪ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣದ ದಾನಿಗಳು ಆದ ಶಾಂತಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ, ಪಂಚಾಯಿತಿ ಅಧ್ಯಕ್ಷೆ ವಿಜಯ, ಉಪಾಧ್ಯಕ್ಷ ನೀಲಮ್ಮ, ಮುಖಂಡರಾದ ಕೆಸಿ ಮಂಜುನಾಥ್, ಪ್ರಸನ್ನ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.





