ವಿಠಲಾಪುರ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಕ್ಲಾಸ್
ಕೃಷ್ಣರಾಜಪೇಟೆ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ – ಕಿಕ್ಕೇರಿ ಕಸಬಾ ವಲಯದ ವಿಠಲಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಕ್ಲಾಸ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು._
_ತಾಲೂಕು ಯೋಜನಾಧಿಕಾರಿಗಳಾದ ಪ್ರಸಾದ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು._
_ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕವಾದ ಶಿಕ್ಷಣ ಸಹಾಯ ನೀಡುವ ನಿಟ್ಟಿನಲ್ಲಿ ರಾಜ್ಯವ್ಯಾಪಿಯಾಗಿ ಈ ಟ್ಯೂಷನ್ ಕ್ಲಾಸ್ ಯೋಜನೆಯನ್ನು ಪೂಜ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದರಿಂದ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಗಲಿದೆ ಎಂದರು._
_ಅದೇ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಸರ ಸಂರಕ್ಷಣೆ, ಸ್ವಚ್ಛತಾ ಅಭಿಯಾನ, ಸ್ವಾಸ್ಥ್ಯ ಸಂಕಲ್ಪ, ಜ್ಞಾನದೀಪ, ಶಿಕ್ಷಕರ ಸಹಕಾರ ಸೇರಿದಂತೆ ಹಲವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದು ವಿವರಿಸಿದರು._
_ಶಾಲಾ ಮುಖ್ಯ ಶಿಕ್ಷಕರಾದ ಶಂಕರ್ ಅವರು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಅಗತ್ಯ ಮಾರ್ಗದರ್ಶನ ದೊರೆಯುತ್ತಿದೆ. ಮುಂದಿನ ವರ್ಷ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಬೇಕೆಂದು ಶುಭ ಹಾರೈಸಿದರು._
_ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ ಮಲ್ಲಿಕಾರ್ಜುನ್, ವಲಯದ ಮೇಲ್ವಿಚಾರಕಿ ಗುಣಶ್ರೀ, ಶಾಲಾ ಶಿಕ್ಷಕರಾದ ಯೋಗೇಶ್, ಸುಚಿತ್ರ, ಸುಪ್ರೀತಾ, ಸೇವಾ ಪ್ರತಿನಿಧಿಗಳಾದ ಶ್ವೇತ, ಜೀವಿತ, ಶಶಿಕಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು,_
ವರದಿ: ಸಾಯಿಕುಮಾರ್. ಎನ್. ಕೆ





