*ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ–ಡಿಸೆಂಬರ್19 ರಿಂದ 21 ರವರೆಗೆ ನಿಷೇಧಾಜ್ಞೆ ಜಾರಿ:ಡಿಸಿ* 
ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯರ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಂಬಂಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ 2025 ನೇ ಡಿಸೆಂಬರ್ 19 ರ ಸಂಜೆ 05.00 ಗಂಟೆಯಿಂದ ಡಿಸೆಂಬರ್ 21 ರ ರಾತ್ರಿ 12.00 ಗಂಟೆಯವರೆಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.
ನಿಷೇಧಾಜ್ಞೆ ಅವಧಿಯಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ. ಸಾರ್ವಜನಿಕರು ಮತದಾನ ಮಾಡಲು ಅನುಕೂಲವಾಗುವಂತೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ದಿನಾಂಕ:21.12.2025 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ. ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ/ಮೆರವಣಿಗೆಗಳನ್ನು ಮತ್ತು ಶವಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನಡೆಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.





